ಬಾರಿ ಕುತೂಹಲ ಕೆರಳಿಸಿರುವ ಬಿಹಾರ ರಾಜ್ಯದ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಗೆ ಚುನಾವಣಾ ಆಯೋಗವು ದಿನಾಂಕ ಘೋಷಣೆ ಮಾಡಿದ್ದು ಒಟ್ಟು 243 ವಿಧಾನಸಭಾ ಕ್ಷೇತ್ರಗಳಲ್ಲಿ ನವಂಬರ 6 ಮತ್ತು 11 ರಂದು 2 ಹಂತಗಳಲ್ಲಿ ಮತದಾನ ನಡೆಯಲಿದ್ದು, ನವೆಂಬರ್ 14ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ತಿಳಿಸಿದರು. ಸೋಮವಾರ ಮಾಧ್ಯಮಗೋಷ್ಠಿ ನಡೆಸಿದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಅ.17 ಕೊನೆಯ ದಿನವಾಗಿದ್ದು, 2ನೇ ಹಂತದ ಚುನಾವಣೆಗೆ ಅ.21 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಕ್ಟೋಬರ್ 18 ಮತ್ತು ಅಕ್ಟೋಬರ್ 21 ರಂದು ಕ್ರಮವಾಗಿ ಮೊದಲ ಮತ್ತು 2ನೇ ಹಂತದ ಕ್ಷೇತ್ರಗಳಿಗೆ ಸಲ್ಲಿಸಿರುವ ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ನಡೆಯಲಿದೆ. ಅಕ್ಟೋಬರ್ 20 ಹಾಗೂ ಅ.23 ಕ್ರಮವಾಗಿ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ ಎಂದರು. ಬಿಹಾರದಲ್ಲಿರುವ 243 ವಿಧಾನಸಭಾ ಕ್ಷೇತ್ರಗಳ ಪೈಕಿ 203 ಸಾಮಾನ್ಯ ಕ್ಷೇತ್ರಗಳಿಗಿದ್ದು, 2 ಎಸ್ಟಿ ಹಾಗೂ 38 ಎಸ್ಸಿ ಮೀಸಲು ಕ್ಷೇತ್ರಗಳಾಗಿವೆ. ಬಿಹಾರದಲ್ಲಿ ಒಟ್ಟು 7.43 ಕೋಟಿ ಮತದಾರರಿದ್ದು ಇವರಲ್ಲಿ 3.92 ಕೋಟಿ ಪುರುಷ ಮತದಾರರು, 3.50 ಕೋಟಿ ಮಹಿಳಾ ಮತದಾರರು, 1,725 ತೃತೀಯ ಲಿಂಗಿ ಮತದಾರರಿದ್ದಾರೆ, 14.01 ಲಕ್ಷ ಫಸ್ಟ್ ಟೈಮ್ ವೋಟರ್ಸ್ ಇದ್ದಾರೆ. ಒಟ್ಟು 90,712 ಬೂತ್‌ಗಳನ್ನ ನಿರ್ಮಾಣ ಮಾಡಲಾಗಿದ್ದು, ನಗರದಲ್ಲಿ 13,911 ಹಾಗೂ ಗ್ರಾಮೀಣ ಭಾಗದಲ್ಲಿ 76,801 ಬೂತ್‌ಗಳಿರಲಿವೆ ಎಂದರು. ಕಾಂಗ್ರೆಸ್ ಬಿಜೆಪಿ ಸೇರಿದಂತೆ ಬಿಹಾರದ ವಿವಿಧ ರಾಜಕೀಯ ಪಕ್ಷಗಳಿಗೆ ಸವಾಲಾಗಿರುವ ಈ ಚುನಾವಣೆಯು ದೇಶದ ಗಮನ ಸೆಳೆದಿದ್ದು ಸುಳ್ಳಲ್ಲ. ಪ್ರಧಾನಿ ಮೋದಿ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಬಿಹಾರದ ಈಗಿನ ಸಿಎಂ ನಿತೀಶಕುಮಾರ, ಆರ್ಜೆಡಿ ಸೇರಿದಂತೆ ಎಲ್ಲ ಪಕ್ಷಗಳಿಗು ಪ್ರತಿಷ್ಠೆಯ ಚುನಾವಣಾ ಕದನವಾಗಿದೆ.
© ASK News Kannada. All Rights Reserved. Designed by AGScurate IT Solutions LLP